ವಸುಧೇಂದ್ರ

1996ರಿಂದ ಕನ್ನಡದಲ್ಲಿ ಸಾಹಿತ್ಯ ರಚಿಸುತ್ತಿರುವ ಇವರು, ಮೂಲತಃ ಬಳ್ಳಾರಿ ಜಿಲ್ಲೆಯ ಸಂಡೂರಿನವರು. NITK ಸೂರತ್ಕಲ್‌ ನಿಂದ BE ಮತ್ತು IISc ಬೆಂಗಳೂರಿನಿಂದ ME ಪದವಿಯನ್ನು ಪಡೆದಿದ್ದಾರೆ. 20 ವರ್ಷಗಳ ಕಾಲ ಸಾಫ್ಟ್‌ವೇರ್ ಪ್ರಪಂಚದಲ್ಲಿ ಕೆಲಸ ಮಾಡಿ, ಈಗ ತಮ್ಮ ಸಮಯವನ್ನು ಪ್ರವಾಸ, ಓದು ಮತ್ತು ಬರೆಹಗಳಲ್ಲಿ ವಿನಿಯೋಗಿಸುತ್ತಾರೆ. ತಾವು “ಗೇ” ಎಂದು ಹೆಮ್ಮೆಯಿಂದ ಹೇಳಿಕೊಂಡ ಕನ್ನಡದ ಮೊಟ್ಟ ಮೊದಲ ಸಾಹಿತಿ ಇವರಾಗಿದ್ದಾರೆ.
ಕತೆ ಮತ್ತು ಪ್ರಬಂಧ ಕ್ಷೇತ್ರದಲ್ಲಿ ಪುಸ್ತಕಗಳನ್ನು ರಚಿಸಿರುವ ಇವರ ಪುಸ್ತಕಗಳು ಹಲವಾರು ಮರು ಮುದ್ರಣಗಳನ್ನು ಕಂಡಿವೆ. ‘ನಮ್ಮಮ್ಮ ಅಂದ್ರೆ ನಂಗಿಷ್ಟ’ ಎನ್ನುವ ಈ ಕೃತಿಯು 20 ಕ್ಕೂ ಹೆಚ್ಚು ಮುದ್ರಣಗಳನ್ನು ಕಂಡಿದೆ. ‘ಮೋಹನಸ್ವಾಮಿ’ ಎಂಬ ಕಥಾಸಂಕಲನ ‘ಗೇ’ ಜೀವನದ ನೋವು ನಲಿವನ್ನು ಚಿತ್ರಿಸುವದರಿಂದ, ಸಾಕಷ್ಟು ಚರ್ಚೆಗೆ ಒಳಗಾಗಿದೆ. ಈ ಕೃತಿಯು ಇಂಗ್ಲಿಷ್, ಸ್ಪಾನಿಷ್, ಮಲಯಾಳಂ, ತೆಲುಗು, ಮರಾಠಿ, ಹಿಂದಿ ಮತ್ತು ತಮಿಳು ಭಾಷೆಯಲ್ಲಿ ಪ್ರಕಟವಾಗಿದೆ. ಇವರ ಕಾದಂಬರಿ ‘ತೇಜೋ ತುಂಗಭದ್ರಾ’ ವಿಜಯನಗರ ಸಾಮ್ರಾಜ್ಯದ ಇತಿಹಾಸದ ಅಧ್ಯಯನದಿಂದ ರಚನೆಗೊಂಡಿದ್ದು, ಸಾಕಷ್ಟು ಚರ್ಚೆ ಮತ್ತು ಮೆಚ್ಚುಗೆಯನ್ನು ಗಳಿಸಿದೆ.
ಕರ್ನಾಟಕ ಸಾಹಿತ್ಯ ಅಕಾಡೆಮಿಯ “ಸಾಹಿತ್ಯಶ್ರೀ” ಪ್ರಶಸ್ತಿಯೂ ಸೇರಿದಂತೆ ಹಲವಾರು ಪ್ರಶಸ್ತಿಗಳು ಮತ್ತು ಬಹುಮಾನಗಳು ಅವರ ಪುಸ್ತಕಗಳಿಗೆ ದಕ್ಕಿವೆ. ‘ಛಂದ ಪುಸ್ತಕ’ ಎಂಬ ಪ್ರಕಾಶನ ಸಂಸ್ಥೆಯನ್ನು ಪ್ರಾರಂಭಿಸಿ, ಅದರ ಮೂಲಕ ನಾಡಿನ ಹಲವಾರು ಹೊಸ ಕನ್ನಡ ಬರಹಗಾರರ ಪುಸ್ತಕಗಳನ್ನು ಪ್ರಕಟಿಸಿದ್ದಾರೆ. ಆ ಪುಸ್ತಕಗಳ ಜೊತೆಗೆ, ತಮ್ಮ ಪುಸ್ತಕಗಳ ಮುದ್ರಣ ಮತ್ತು ಮಾರಾಟವನ್ನು ಸ್ವತಃ ನೋಡಿಕೊಳ್ಳುತ್ತಾರೆ.
ಚಾರಣದಲ್ಲಿ ಆಸಕ್ತಿಯಿರುವ ಇವರು ತಾಂಜಾನಿಯಾ ದೇಶದಲ್ಲಿರುವ ಕಿಲಿಮಂಜಾರೋ ಪರ್ವತವನ್ನೂ ಮತ್ತು ಹಿಮಾಲಯದ ಹಲವು ಪರ್ವತಗಳನ್ನೂ ಹತ್ತಿದ್ದಾರೆ. ಕೈಲಾಶ- ಮಾನಸಸರೋವರದ ಚಾರಣವನ್ನೂ ಮಾಡಿದ್ದಾರೆ. ಅಂತಾರಾಷ್ಟ್ರೀಯ ಸಿನಿಮಾ, ಮಹಾಭಾರತದ ಓದು, ಶಾಸ್ತ್ರೀಯ ಸಂಗೀತವನ್ನು ಕೇಳುವುದು ಅವರ ಇತರ ಹವ್ಯಾಸಗಳಾಗಿವೆ.